ಜನಸ್ಪಂದನ ನ್ಯೂಸ್, ಬಳ್ಳಾರಿ: ಜಿಲ್ಲೆಯ ಗುರುಕುಲ ವಸತಿ ಶಾಲೆಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಘಟನೆಯೊಂದು ಓರ್ವ ವಿದ್ಯಾರ್ಥಿ ಸಾವಿಗೆ ಕಾರಣವಾಗಿದ್ದು, ಇನ್ನೂ ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಒಂಬತ್ತನೇ ತರಗತಿಯ ವಿದ್ಯಾರ್ಥಿಯೋರ್ವ ಮಂಚದ ಕಬ್ಬಿಣದ ರಾಡ್ ಬಳಸಿ ಸಹಪಾಠಿಗಳ ಮೇಲೆ ಹಲ್ಲೆ ನಡೆಸಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯಿಂದ ದಾಳಿ :
ಮಾಹಿತಿಯ ಪ್ರಕಾರ, ರಾತ್ರಿ ಊಟದ ಬಳಿಕ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿರುವ ತಮ್ಮ ತಮ್ಮ ಹಾಸಿಗೆಗಳಲ್ಲಿ ಮಲಗಿಕೊಂಡಿದ್ದರು. ಈ ಸಮಯದಲ್ಲಿ ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಅಚಾನಕ್‌ವಾಗಿ ಮಂಚದ ಕಬ್ಬಿಣದ ರಾಡ್ ತೆಗೆದುಕೊಂಡು ಹಾಸ್ಟೆಲ್‌ನಲ್ಲಿ ಮಲಗಿದ್ದ ಸಹ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲು ಆರಂಭಿಸಿದ್ದಾನೆ.
ಮಲಗಿದ್ದ ವಿದ್ಯಾರ್ಥಿಗಳ ಮೇಲೆ ಮನಬಂದಂತೆ ರಾಡ್‌ನಿಂದ ಹೊಡೆದ ಪರಿಣಾಮ ಎಂಟು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಭೀಕರ ದಾಳಿಯಲ್ಲಿ ಒಬ್ಬ ವಿದ್ಯಾರ್ಥಿಗೆ ತೀವ್ರವಾಗಿ ತಲೆಗೆ ಗಾಯವಾಗಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಉಳಿದ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಬಳ್ಳಾರಿಯ ಬಿಮ್ಸ್ ಆಸ್ಪತ್ರೆ ಹಾಗೂ ಟ್ರಾಮಾಕೇರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಗಾಯಗೊಂಡವರಲ್ಲಿ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ. ಉಳಿದ ವಿದ್ಯಾರ್ಥಿಗಳಿಗೂ ತೀವ್ರ ಗಾಯಗಳಾಗಿವೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಘಟನೆ ನಡೆಯುವ ವೇಳೆ ಹಾಸ್ಟೆಲ್‌ನಲ್ಲಿ ಗಲಾಟೆ ನಡೆಯುತ್ತಿರುವುದನ್ನು ಗಮನಿಸಿದ ವಾರ್ಡನ್ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದಾಗ, ದಾಳಿ ನಡೆಸಿದ ವಿದ್ಯಾರ್ಥಿ ವಾರ್ಡನ್ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ. ಈ ವೇಳೆ ವಾರ್ಡನ್ ಕೂಡ ಗಾಯಗೊಂಡಿದ್ದಾರೆ.
ಹಲ್ಲೆ ನಡೆಸಿದ ಬಳಿಕ ಆರೋಪಿತ ವಿದ್ಯಾರ್ಥಿ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಕುರಿತು ಮಾಹಿತಿ ಪಡೆದ ಬಳ್ಳಾರಿ ಬ್ರೂಸ್‌ಪೇಟೆ ಪೊಲೀಸರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯಿಂದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ವಿದ್ಯಾರ್ಥಿಯನ್ನು ಪತ್ತೆಹಚ್ಚಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಘಟನೆಗೆ ಮುನ್ನ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಆದರೆ ದಾಳಿಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದಲೇ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ : ನಿಗೂಢ ಸಾವು: ದೇವಸ್ಥಾನದ ಶೌಚಾಲಯದಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ.!
ಈ ಘಟನೆ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ. ತಡರಾತ್ರಿ ನಡೆದ ಈ ದುರಂತದ ಸುದ್ದಿ ತಿಳಿದು ಗಾಯಗೊಂಡ ಮಕ್ಕಳ ಪೋಷಕರು ಹಾಗೂ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯಿಂದ ದಾಳಿ ಹಿನ್ನಲೆಯಲ್ಲಿ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದು, ವಿದ್ಯಾರ್ಥಿಗಳ ಹೇಳಿಕೆಗಳು ಹಾಗೂ ಹಾಸ್ಟೆಲ್ ಸಿಬ್ಬಂದಿಯ ಮಾಹಿತಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.
Courtesy : Suvarna News
Disclaimer: ಈ ಸುದ್ದಿಯ ಮಾಹಿತಿಯನ್ನು ಲಭ್ಯವಿರುವ ಮೂಲಗಳು ಮತ್ತು ಪ್ರಾಥಮಿಕ ವರದಿಗಳ ಆಧಾರದ ಮೇಲೆ ಪ್ರಕಟಿಸಲಾಗಿದೆ. ತನಿಖೆ ಮುಂದುವರಿದಂತೆ ವಿವರಗಳು ಬದಲಾಗುವ ಸಾಧ್ಯತೆ ಇದೆ.





