ಬಿಲ್ ಪಾವತಿಗೆ ಲಂಚ : ಕಾರ್ಯನಿರ್ವಾಹಕ ಎಂಜಿನಿಯರ್‌ ಬಂಧಿಸಿದ ಲೋಕಾಯುಕ್ತ ಪೊಲೀಸರು.!

ಜನಸ್ಪಂದನ ನ್ಯೂಸ್, ಬೆಂಗಳೂರು : ಗುತ್ತಿಗೆದಾರರಿಗೆ ಬಿಲ್‌ ಪಾವತಿಸಲು ಕಡತಕ್ಕೆ ಸಹಿ ಮಾಡಲು 10 ಸಾವಿರ ರೂ. ಲಂಚ ಪಡೆಯುತ್ತಿದ್ದ ಬಿಬಿಎಂಪಿ ಚಾಮರಾಜಪೇಟೆ ವಿಭಾಗದ ಪ್ರಭಾರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ (ಎಇಇ) ಶಿವಣ್ಣ ಅವರನ್ನು ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ

ಘನ ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ ಕೆಲಸದ ಗುತ್ತಿಗೆ ಪಡೆದಿರುವ ಡಿ.ಜಿ. ವೆಂಕಟೇಶ್‌ ಅವರಿಗೆ ಬಿಲ್‌ ಪಾವತಿ ಬಾಕಿ ಇತ್ತು. ಬಾಕಿ ಮೊತ್ತ ಪಾವತಿಸುವಂತೆ ಅವರು ಎಇಇ ಅವರಲ್ಲಿ ಮನವಿ ಮಾಡಿದ್ದರು ಎಂದು ತಿಳಿದುಬಂದಿದೆ.

ಬಿಲ್ ಪಾವತಿಯ ಕಡತಕ್ಕೆ ಸಹಿ ಮಾಡಲು 50 ಸಾವಿರ ರೂ. ಲಂಚ ನೀಡುವಂತೆ ಶಿವಣ್ಣ ಬೇಡಿಕೆ ಇಟ್ಟಿದ್ದರು. ಈ ಕುರಿತು ವೆಂಕಟೇಶ್‌ ಅವರು ಲೋಕಾಯುಕ್ತ ಬೆಂಗಳೂರು ನಗರ ಪೊಲೀಸ್‌ ಘಟಕಕ್ಕೆ ದೂರು ನೀಡಿದ್ದರು.

ಮಂಗಳವಾರ ಮಧ್ಯಾಹ್ನ ವೆಂಕಟೇಶ್‌ ಅವರಿಂದ ₹ 10,000 ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಲೋಕಾಯುಕ್ತ ಪೊಲೀಸರು ಶಿವಣ್ಣ ಅವರನ್ನು ಬಂಧಿಸಿದ್ದಾರೆ.

ಆರೋಪಿಯ ವಿಚಾರಣೆ ನಡೆಸುತ್ತಿದ್ದು, ಪ್ರಾಥಮಿಕ ತನಿಖೆಯ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಲೋಕಾಯುಕ್ತ ಹಿರಿಯ ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.